ದಾವಣಗೆರೆ: ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯು ಇಂದು ದಾವಣಗೆರೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ನಡೆಯಿತು.
ಪ್ರಾಧಿಕಾರದ ಅಧ್ಯಕ್ಷರು, ಆಯುಕ್ತರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಗರದ ಸಮಗ್ರ ಅಭಿವೃದ್ಧಿ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು.
ಪ್ರಾಧಿಕಾರ ವ್ಯಾಪ್ತಿಯ ಕರೂರು ಬಡಾವಣೆ ಬಳಿ ಅತ್ಯಾಧುನಿಕ ಸೌಲಭ್ಯವುಳ್ಳ, ಸುಸಜ್ಜಿತ ಹೊಸ ಲೇಔಟ್ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದರಿಂದ ದಾವಣಗೆರೆ ಭಾಗದ ಜನರಿಗೆ ಉತ್ತಮ ನಿವೇಶನ ಸೌಲಭ್ಯ ದೊರೆಯಲಿದೆ ಎಂದು ಅವರು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಇರುವುದರಿಂದ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಮುಂಬರುವ ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಅನುಮತಿ ಕುರಿತು ಸಾರ್ವಜನಿಕರು ಹಾಗೂ ಸಂಘಟಕರಲ್ಲಿ ಗೊಂದಲವಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಹಬ್ಬವನ್ನು ಶಾಂತಿಯುತವಾಗಿ, ಸೌಹಾರ್ದತೆಯಿಂದ ಆಚರಿಸಲು ಎಲ್ಲರ ಸಹಕಾರ ಅಗತ್ಯ ಎಂದು ಅವರು ಮನವಿ ಮಾಡಿದರು. ಅಲ್ಲದೆ ನಗರಾಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ, ಶಾಸಕರಾದ ಸಮರ್ಥ್ ಶಾಮನೂರು, ದೂಡ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ , ಪಾಧಿಕಾರದ ಆಯುಕ್ತರಾದ ರೇಣುಕಾ, ಪಾಲಿಕೆ ಆಯುಕ್ತರಾದ ಮಹಾಂತೇಶ್, ಮಾಜಿ ಮೇಯರ್ ಕೆ.ಚಮನ್ ಸಾಬ್, ಬೂದಾಳ್ ಬಾಬು ಹಾಗೂ ಪ್ರಾಧಿಕಾರದ ಸದಸ್ಯರುಗಳು ಇತರರು ಉಪಸ್ಥಿತರಿದ್ದರು
Leave a comment