ದಾವಣಗೆರೆ: ಜಿಲ್ಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನಪ್ರಿಯತೆ ಹಾಗೂ ರಾಜಕೀಯವಾಗಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗುತ್ತಿರುವುದನ್ನು ಸಹಿಸಿಕೊಳ್ಳಲಾಗದೆ ಬಿಜೆಪಿ ನಾಯಕರು ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಹಾಗೂ ಮಹಾನಗರ ಪಾಲಿಕೆ ಸದಸ್ಯ ಎಲ್.ಎಚ್. ಸಾಗರ್ ಆರೋಪಿಸಿದ್ದಾರೆ.
ಎಸ್.ಎಸ್. ಮಲ್ಲಿಕಾರ್ಜುನ್ ಅವರ ಕುರಿತು ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಎಸ್‌ಎಸ್‌ಎಂ ನಾಲ್ಕನೇ ಬಾರಿಗೆ ಸಚಿವರಾಗಿರುವುದನ್ನು ಸಹಿಸಲಾಗದೆ ಜಾಧವ್ ಅಸೂಯೆಯಿಂದ ಮಾತನಾಡುತ್ತಿದ್ದಾರೆ ಪತ್ರಿಕಾ ಹೇಳಿಕೆಯಲ್ಲಿ ಎಂದು ಕಿಡಿಕಾರಿದ್ದಾರೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಜಿಲ್ಲೆಯಲ್ಲಿ ಬಿಜೆಪಿ ತನ್ನ ನೆಲೆ ಕಳೆದುಕೊಳ್ಳುತ್ತಿದ್ದು, ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಗಳಿಸಿಕೊಂಡು ಬಲಿಷ್ಠವಾಗುತ್ತಿರುವುದನ್ನು ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿವೃದ್ಧಿ ವಿಚಾರದಲ್ಲಿ ಮಾತನಾಡುವ ಬದಲು ವೈಯಕ್ತಿಕ ಟೀಕೆಗಳಿಗೆ ಇಳಿಯುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಜಿಲ್ಲೆಯನ್ನು ಅಭಿವೃದ್ಧಿಯ ಹೊಸ ಹಾದಿಗೆ ಕೊಂಡೊಯ್ಯುವಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪಾತ್ರ ಮಹತ್ವದ್ದಾಗಿದೆ. ನಗರದ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಸುಧಾರಣೆ, ಸೌಂದರ್ಯೀಕರಣ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ವೇಗ ನೀಡಲಾಗಿದೆ. ವಿದೇಶಿ ಮಾದರಿಯ ರಸ್ತೆಗಳ ನಿರ್ಮಾಣದ ಮೂಲಕ ನಗರದ ಸ್ವರೂಪವನ್ನೇ ಬದಲಾಯಿಸುವ ಪ್ರಯತ್ನ ನಡೆದಿದೆ ಎಂದು ಸಾಗರ್ ಹೇಳಿದ್ದಾರೆ.
ಅಭಿವೃದ್ಧಿ ಕುರಿತು ಮಾತನಾಡುವ ಬಿಜೆಪಿ ನಾಯಕರು ಮೊದಲು ತಮ್ಮ ಅವಧಿಯಲ್ಲಿ ಜಿಲ್ಲೆಗೆ ನೀಡಿರುವ ಕೊಡುಗೆಯನ್ನು ಜನರ ಮುಂದೆ ಇಡಲಿ. ಡಿಸಿಎಂ ಟೌನ್‌ಶಿಪ್, ರೈಲ್ವೆ ಅಂಡರ್‌ಬ್ರಿಡ್ಜ್ ಸೇರಿದಂತೆ ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಯಾರು ಕೈಗೊಂಡರು ಎಂಬುದನ್ನು ಜನತೆಗೆ ತಿಳಿಸಲಿ.ಅಭಿವೃದ್ಧಿಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಪ್ರಶ್ನಿಸುವ ನೈತಿಕ ಹಕ್ಕು ಬಿಜೆಪಿಗೆ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಬಿಜೆಪಿ ನಾಯಕರಿಗೆ ಮಾತನಾಡುವುದೇ ಚಟವಾಗಿದ್ದು, ಟೀಕಿಸುವುದೇ ವೃತ್ತಿಯಾಗಿದೆ.ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಬದಲು ಪ್ರತಿದಿನ ಕಾಂಗ್ರೆಸ್ ಹಾಗೂ ಸಚಿವರ ವಿರುದ್ಧ ಆರೋಪ ಮಾಡುವುದು ಅವರ ರಾಜಕೀಯ ಕಾರ್ಯಸೂಚಿಯಾಗಿದೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದಾರೆ ಎಂದು ಸಾಗರ್ ಎಚ್ಚರಿಸಿದ್ದಾರೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಅಭಿವೃದ್ಧಿ ಕಾರ್ಯಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಇದನ್ನು ಸಹಿಸಲಾಗದೆ ಬಿಜೆಪಿ ನಾಯಕರು ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ. ಟೀಕೆ ಮಾಡುವ ಬದಲು ಅಭಿವೃದ್ಧಿಯ ವಿಚಾರದಲ್ಲಿ ಆರೋಗ್ಯಕರ ಚರ್ಚೆಗೆ ಬಿಜೆಪಿ ನಾಯಕರು ಸಿದ್ಧರಾಗಲಿ ಎಂದು ಅವರು ಸವಾಲು ಹಾಕಿದ್ದಾರೆ.
Leave a comment